ಅಂಕೋಲ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಪೆಟ್ರೋಲಿಯಂ ಟ್ಯಾಂಕರ್ – ಸಂಚಾರ ಸ್ಥಗಿತ

ಅಂಕೋಲ: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲು ಬಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಪೆಟ್ರೋಲಿಯಂ ಉತ್ಪನ್ನ ಹೊತ್ತೊಯ್ಯುತ್ತಿದ್ದ ಟ್ಯಾಂಕರ್ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಯತ್ತ ಸಾಗುತ್ತಿದ್ದ ಈ ಟ್ಯಾಂಕರ್ ಅಗಸೂರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ವಾಹನ ಸಂಪೂರ್ಣವಾಗಿ ಭಸ್ಮವಾಗಿದೆ.​

ಬೆಂಕಿಯ ಜ್ವಾಲೆಗಳು ಭೀಕರವಾಗಿ ಆವರಿಸಿದ್ದರಿಂದ ರಸ್ತೆಯ ಪಕ್ಕದಲ್ಲಿದ್ದ ಅರಣ್ಯ ಪ್ರದೇಶಕ್ಕೂ ಬೆಂಕಿ ಹರಡಿದ್ದು, ಪರಿಸರದಲ್ಲಿ ದಟ್ಟವಾದ ಹೊಗೆ ಆವರಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸಪಟ್ಟು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಯಲ್ಲಾಪುರ-ಹುಬ್ಬಳ್ಳಿ ಮಾರ್ಗದ ವಾಹನ ಸಂಚಾರವನ್ನು ಪೊಲೀಸರು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ.​ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಪರದಾಡುವಂತಾಗಿದೆ.

ಸದ್ಯ ಅಂಕೋಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವಷ್ಟೇ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆಯಿದೆ

Leave a Reply

Your email address will not be published. Required fields are marked *

error: Content is protected !!